
ಮಂಗಳೂರು: ನಿನ್ನೆ ಬಂಟ್ವಾಳದಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹೀಂ (34)ರ ಮೃತದೇಹ ಸಾಗಾಟದ ವೇಳೆ ಫರಂಗಿಪೇಟೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಣೆಯಾಗಿದ್ದು. ಉದ್ರಿಕ್ತ ಗುಂಪು ರಸ್ತೆ ತಡೆದು, ಬಸ್‌ಗಳ ಮೇಲೆ ಕಲ್ಲುತೂರಾಟ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹೀಂ ಅವರ ಮೃತದೇಹವನ್ನು ಕೊಳತ್ತಮಜಲಿಗೆ ಇಂದು ಬೆಳಗ್ಗೆ ಸಾಗಿಸಲಾಯಿತು. ಕುತ್ತಾರ್ ಮದನಿ ನಗರ ಮಸೀದಿಯಲ್ಲಿ ರಹೀಂ ಅವರ ಮಯ್ಯತ್ ಸ್ನಾನ ಮಾಡಲಾಯಿತು. ನಂತರ ಮಯ್ಯತ್ ನಮಾಝ್ ಬಳಿಕ ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಮೆರವಣಿಗೆಯ ಮೂಲಕ ಸಾಗಿಸಲಾಯಿತು. ಈ ವೇಳೆ ನೂರಾರು ಜನ ಸೇರಿದ್ದರು. ಅಲ್ಲದೇ ಹತ್ಯೆ ಖಂಡಿಸಿ ಮಂಗಳೂರಿನಿಂದ ಬಂಟ್ವಾಳದವರೆಗೆ ಅಂಗಡಿಗಳ ಮುಂಗಟ್ಟುಗಳು ಬಂದ್ ಮಾಡಿ ಮುಸ್ಲಿಮ್ ವ್ಯಾಪಾರಿಗಳು ಸಹ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ವಿಪರೀತ ಮಳೆಯ ನಡುವೆ ರಹೀಂ ಮೃತ ದೇಹ ರವಾನೆ ಮಾಡಲಾಗಿದ್ದು, ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುತ್ತಮುತ್ತಲಿನ ಆರು ಜಿಲ್ಲೆಗಳ ಹೆಚ್ಚುವರಿ ಪೊಲೀಸರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ರವಾನೆ ಮಾಡಲಾಗಿದೆ.
ಮಂಗಳವಾರ ಮಧ್ಯಾಹ್ನ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ವಾಹನದಲ್ಲಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಅಬ್ದುಲ್ ರಹೀಂ ಮತ್ತು ಕಲಂದರ್ ಶಾಫಿ ಮೇಲೆ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ಅಬ್ದುಲ್ ರಹೀಂ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದನು. ಕಲಂದರ್ ಶಾಹಿ ಗಂಭೀರವಾಗಿ ಗಾಯಗೊಂಡಿದ್ದು. ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.