
ತುಮಕೂರು: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆಯುತ್ತಿರುವ ವಿರೋಧಿಸಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಇಂದು ಗುಬ್ಬಿ ತಾಲ್ಲೂಕಿನ ನಿಟ್ಟೂರಿನಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಗುಬ್ಬಿ ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಅಲ್ಲದೇ 144 ಸೆಕ್ಷನ್ ಜಾರಿ ಮಾಡಿ, ಪ್ರತಿಭಟನೆ ನಡೆಯದಂತೆ ಎಚ್ಚರ ವಹಿಸಲಾಗಿತ್ತು. ಹೇಮಾವತಿ ನೀರನ್ನು ರಾಮನಗರಕ್ಕೆ ತೆಗೆದುಕೊಂಡು ಹೋಗುವ ರಾಜ್ಯ ಸರ್ಕಾರದ ಯೋಜನೆಯನ್ನ ಹೋರಾಟಗಾರರು ವಿರೋಧಿಸಿದ್ದಾರೆ. ನಾವಾ ನೀವಾ ನೋಡಿಯೇ ಬಿಡೋಣ ಎಂದು ಸರ್ಕಾರಕ್ಕೆ ಸೆಡ್ಡು ಹೊಡೆದ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ನೀರಿನ ಪೈಪ್ಗಳನ್ನು ನಾಲೆಗೆ ತಳ್ಳಲು ಪ್ರಯತ್ನಿಸಿದರು.
ಅಲ್ಲದೇ ಜೆಸಿಬಿ ಮೂಲಕ ನಾಲೆಗಳನ್ನು ಮುಚ್ಚಿಸಿದರು. ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಇನ್ನು ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟಕ್ಕೆ ಬೆಳ್ಳಾವಿ ಕಾರದೇಶ್ವರ ಸ್ವಾಮೀಜಿ ಸೇರಿದಂತೆ ವಿವಿಧ ಮಠದ ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ ಸ್ವಾಮೀಜಿಗಳು, ಬಂಧಿಸಿದ್ದ ಪ್ರತಿಭಟನಾಕಾರರನ್ನ ಬಸ್ನಿಂದ ಕೆಳಗಿಳಿಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿದ್ದಾರೆ.