
ಧಾರವಾಡ/ಹುಬ್ಬಳ್ಳಿ: ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಡಿಯಾಗಿದೆ. ಹುಬ್ಬಳ್ಳಿ-ಧಾರವಾಡದ ಪ್ರಮುಖ ರಸ್ತೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಕೆರೆಯಂತಾಗಿದೆ. ವ್ಯಕ್ತಿಯೊಬ್ಬರು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆಯೂ ಸಂಭವಿಸಿದೆ. ರಸ್ತೆ ದಾಟುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ರಾತ್ರಿಯಿಡೀ ಶೋಧ ಕಾರ್ಯಾಚರಣೆ ನಡೆಸಿದ್ರು ಪತ್ತೆಯಾಗಿಲ್ಲ.
ಬೀರಬಂದ ಓಣಿಯ ಹುಸೇನ ಕಳಸ ಎಂಬವರೇ ಕೊಚ್ಚಿಕೊಂಡು ಹೋದವರು. ರಸ್ತೆ ಪಕ್ಕದ ಚರಂಡಿಯ ನೀರಿನಲ್ಲಿ ಆಯತಪ್ಪಿ ಜಾರಿ ಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಹುಡುಕಾಟ ನಡೆಸಿದ್ದಾರೆ. ಆದರೆ, ಇದುವರೆಗೂ ಪತ್ತೆಯಾಗಿಲ್ಲ. ಧಾರವಾಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.